ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಪ್ರದೋಷ್ ಅವರ ಮಾಫಿ ಸಾಕ್ಷಿ (ಅಪ್ರೂವರ್) ಹೇಳಿಕೆಯನ್ನು ದಾಖಲಿಸಿಕೊಳ್ಳಲು 59ನೇ ಸೆಷನ್ಸ್ ಕೋರ್ಟ್ ಸೆಪ್ಟೆಂಬರ್ 28ಕ್ಕೆ ದಿನಾಂಕ ನಿಗದಿಪಡಿಸಿದೆ. ಪ್ರದೋಷ್ ಮಾಫಿ ಸಾಕ್ಷಿಯಾಗುವುದನ್ನು ತಡೆಯಲು ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚೆಗಷ್ಟೇ ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್‌ನ ಈ ತೀರ್ಪಿನ ಬೆನ್ನಲ್ಲೇ ವಿಚಾರಣಾ ನ್ಯಾಯಾಲಯವು ಸಾಕ್ಷಿ ದಾಖಲಾತಿಗೆ ಮುಹೂರ್ತ ನಿಗದಿಪಡಿಸಿದ್ದು, ದರ್ಶನ್ ಬಳಗಕ್ಕೆ ದೊಡ್ಡ ಹಿನ್ನಡೆಯಾಗಿದೆ.
ಇನ್ನೊಂದೆಡೆ, ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ದರ್ಶನ್ ಪರ ವಕೀಲರು ನಿರ್ಧರಿಸಿದ್ದಾರೆ. ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತಿರುವ ಕಾರಣ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಮುಂದೂಡಬೇಕೆಂದು ದರ್ಶನ್ ಪರ ವಕೀಲರು ಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಈ ಮನವಿಯನ್ನು ನಿರಾಕರಿಸಿದ ನ್ಯಾಯಾಲಯ, “ಈ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಈಗಾಗಲೇ ಸಮಯದ ಮಿತಿ (ಟೈಮ್ ಬಾಂಡ್) ವಿಧಿಸಿದೆ, ಹೀಗಾಗಿ ದಿನಾಂಕವನ್ನು ಮುಂದೂಡಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿ ಅರ್ಜಿ ತಳ್ಳಿಹಾಕಿದೆ.




