IPL 2026 LSG vs KKR: ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೂಡ 20 ಓವರ್ಗಳಲ್ಲಿ 155 ರನ್ ಬಾರಿಸಿ ಪಂದ್ಯ ಟೈ ಗೊಳಿಸಿದ್ದರು. ಬಳಿಕ ನಡೆದ ಸೂಪರ್ ಓವರ್ನಲ್ಲಿ ಕೆಕೆಆರ್ ತಂಡ ಜಯ ಸಾಧಿಸಿದೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಿಂಕು ಸಿಂಗ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ 15 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
ಲಕ್ನೋನ ಏಕನಾ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಂಕು ಸಿಂಗ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 51 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಅಜೇಯ 83 ರನ್ ಬಾರಿಸಿದರು.
ಈ 83 ರನ್ಗಳೊಂದಿಗೆ ಐಪಿಎಲ್ ಇತಿಹಾಸದಲ್ಲಿ 6ನೇ ಕ್ರಮಾಂಕದಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ರಿಂಕು ಸಿಂಗ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು.
2011 ರ ಐಪಿಎಲ್ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಮಹೇಂದ್ರ ಸಿಂಗ್ ಧೋನಿ ಅಜೇಯ 70 ರನ್ ಬಾರಿಸಿದ್ದರು. ಈ ಮೂಲಕ ಐಪಿಎಲ್ನಲ್ಲಿ ಆರನೇ ಕ್ರಮಾಂಕದಲ್ಲಿ ಅತ್ಯಧಿಕ ವೈಯುಕ್ತಿಕ ಸ್ಕೋರ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು
ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 83 ರನ್ ಬಾರಿಸುವ ಮೂಲಕ ರಿಂಕು ಸಿಂಗ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ 15 ವರ್ಷಗಳ ಹಿಂದೆ ಮಹೇಂದ್ರ ಸಿಂಗ್ ಧೋನಿ ಬರೆದಿದ್ದ ದಾಖಲೆಯನ್ನು ರಿಂಕು ಅಳಿಸಿ ಹಾಕಿದ್ದಾರೆ.




