ಹಬ್ಬಗಳ ಆರಂಭವಾಗುತ್ತಿರುವ ಬೆನ್ನಲ್ಲೇ ಅಗತ್ಯ ವಸ್ತುವಾದ ಈರುಳ್ಳಿಯ ಬೆಲೆ ಗಗನಕ್ಕೇರುತ್ತಿದ್ದು, ಸಾರ್ವಜನಿಕರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಕೇಂದ್ರ ಸರ್ಕಾರವು ಬೆಲೆ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ಮಾರುಕಟ್ಟೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಸದ್ಯ ಸಗಟು ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ 25ರಿಂದ 50 ರೂಪಾಯಿ ಇದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ ಈಗಾಗಲೇ 65 ರೂಪಾಯಿಗೆ ಮಾರಾಟವಾಗುತ್ತಿದೆ. ಮುಂಬರುವ ಗೌರಿ-ಗಣೇಶ ಹಬ್ಬದ ವೇಳೆಗೆ ಈರುಳ್ಳಿ ಬೆಲೆ ಪ್ರತಿ ಕೆಜಿಗೆ 100 ರೂಪಾಯಿಗೆ ತಲುಪುವ ಭೀತಿ ಎದುರಾಗಿದೆ. ಕರ್ನಾಟಕದ ಗದಗ, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಮುಂಗಾರು ಮಳೆಯ ಅಭಾವದಿಂದ ಬೆಳೆ ಕುಸಿದಿದ್ದರೆ, ಇನ್ನೊಂದೆಡೆ ಮಹಾರಾಷ್ಟ್ರದ ನಾಸಿಕ್ ಮತ್ತು ವಿದರ್ಭ ಭಾಗಗಳಲ್ಲಿ ತೀವ್ರ ಮಳೆಯಿಂದಾಗಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಅಕ್ಟೋಬರ್ ಮಧ್ಯಭಾಗದವರೆಗೆ ಹೊಸ ಈರುಳ್ಳಿ ಮಾರುಕಟ್ಟೆಗೆ ಬರುವ ಸಾಧ್ಯತೆಯಿಲ್ಲದಿರುವುದರಿಂದ ಪೂರೈಕೆಯಲ್ಲಿ ತೀವ್ರ ಅಭಾವ ಸೃಷ್ಟಿಯಾಗಿದೆ. ಜೊತೆಗೆ, ಕೇಂದ್ರ ಸರ್ಕಾರ ಸಂಗ್ರಹಿಸಿರುವ ಬಫರ್ ಸ್ಟಾಕ್ ಕೂಡ ಮಾರುಕಟ್ಟೆಯ ಬೃಹತ್ ಬೇಡಿಕೆಯನ್ನು ಪೂರೈಸಲು ಸಾಕಾಗುತ್ತಿಲ್ಲ. ಇದಲ್ಲದೆ ಡೀಸೆಲ್ ದರ ಏರಿಕೆಯಿಂದಾಗಿ ಅಕ್ಕಿ, ಬೇಳೆ, ಎಣ್ಣೆ ಮತ್ತು ಸಕ್ಕರೆಯಂತಹ ಅಗತ್ಯ ವಸ್ತುಗಳ ಸಾಗಣೆ ವೆಚ್ಚ ಹೆಚ್ಚಾಗಿದ್ದು, ಇದರ ನೇರ ಪರಿಣಾಮವಾಗಿ ಮುಂಬರುವ ದಿನಗಳಲ್ಲಿ ಹೋಟೆಲ್‌ಗಳಲ್ಲಿ ಈರುಳ್ಳಿ ದೋಸೆ, ಪಾನಿಪುರಿ ಹಾಗೂ ಮಸಾಲೆಪುರಿ ಮುಂತಾದ ಖಾದ್ಯಗಳ ದರ ಏರಿಕೆಯಾಗುವುದು ನಿಶ್ಚಿತವಾಗಿದೆ.






