ಯಶ್ ನಟನೆಯ ‘ಟಾಕ್ಸಿಕ್’, ಧ್ರುವ ಸರ್ಜಾ ನಟನೆಯ ‘ಕೆಡಿ’, ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’ ಸೇರಿ ಹಲವು ಬಹುನಿರೀಕ್ಷಿತ ಸಿನಿಮಾಗಳನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಇತ್ತೀಚೆಗೆ ಈ ಸಂಸ್ಥೆ ತೆಲುಗು ಚಿತ್ರರಂಗಕ್ಕೂ ಎಂಟ್ರಿ ನೀಡಿತು. ಈಗ ನಟ ಶಿವರಾಜ್‌ಕುಮಾರ್ ಜೊತೆ ಸಿನಿಮಾ ಮಾಡಲು ‘ಕೆವಿಎನ್ ಪ್ರೊಡಕ್ಷನ್ಸ್’ ಮುಂದಾಗಿದೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಇತ್ತೀಚೆಗೆ ಈ ಸಿನಿಮಾಗೆ ಸ್ಕ್ರಿಪ್ಟ್ ಪೂಜೆ ಮಾಡಲಾಯಿತು.

ನಿರ್ದೇಶಕ ಪವನ್ ಒಡೆಯರ್ ಅವರು ಪುನೀತ್ ರಾಜ್‌ಕುಮಾರ್ ಜೊತೆ ಎರಡು ಸಿನಿಮಾಗಳನ್ನು ಮಾಡಿದ್ದಾರೆ. ಈಗ ಇದೇ ಮೊದಲ ಬಾರಿಗೆ ಶಿವರಾಜ್‌ಕುಮಾರ್ ಜೊತೆ ಸಿನಿಮಾ ಮಾಡುವ ಅವಕಾಶ ಅವರಿಗೆ ಸಿಕ್ಕಿದೆ. ಸೆಪ್ಟೆಂಬರ್ 3ರಂದು ಈ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ನಿರ್ದೇಶನ ಮಾಡುವುದರ ಜೊತೆಗೆ ಪವನ್ ಒಡೆಯರ್ ಅವರು ನಿರ್ಮಾಣದಲ್ಲೂ ಕೈ ಜೋಡಿಸುತ್ತಿದ್ದಾರೆ.
ವೆಂಕಟ್ ಕೊನಂಕಿ ಅವರ ‘ಕೆವಿಎನ್ ಪ್ರೊಡಕ್ಷನ್ಸ್’ ಮತ್ತು ಪವನ್ ಒಡೆಯರ್ ಅವರ ‘ಒಡೆಯರ್ ಮೂವೀಸ್’ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಲಿವೆ. ದೇಶದ ಹಲವು ಭಾಗಗಳಲ್ಲಿ ಈ ಸಿನಿಮಾಗೆ ಶೂಟಿಂಗ್ ನಡೆಯಲಿದೆ. ಸೆಪ್ಟೆಂಬರ್ 3ರಂದು ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಶುರು ಆಗಲಿದೆ. ನಂತರ ಮಂಡ್ಯ , ಮುಂಬೈ, ಹೈದರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.
ಇದು ಒಂದು ಕಮರ್ಷಿಯಲ್ ಎಂಟರ್ಟೈನ್ಮೆಂಟ್ ಸಿನಿಮಾ ಆಗಿರಲಿದೆ ಎಂದು ಚಿತ್ರತಂಡ ಹೇಳಿದೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಶಶಾಂಕ್ ನಾರಾಯಣ್ ಅವರು ಸಂಕಲನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಶಿವರಾಜ್‌ಕುಮಾರ್ , ಪವನ್ ಒಡೆಯರ್ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಕಾಂಬಿನೇಷನ್ ಆದ್ದರಿಂದ ನಿರೀಕ್ಷೆ ಜೋರಾಗಿದೆ.
ಈ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ಜೊತೆ ಹಲವು ಕಲಾವಿದರು ಅಭಿನಯಿಸಲಿದ್ದಾರೆ. ಜಯರಾಮ್, ಗೋಪಾಲಕೃಷ್ಣ ದೇಶಪಾಂಡೆ, ಪ್ರಕಾಶ್ ಬೆಳವಾಡಿ, ಸಾಯಿ ಕುಮಾರ್, ಸಂಜನಾ ಆನಂದ್, ದೀಕ್ಷಿತ್ ಶೆಟ್ಟಿ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಇತ್ತೀಚೆಗೆ ನಡೆದ ಸ್ಕ್ರಿಪ್ಟ್ ಪೂಜೆಯಲ್ಲಿ ಚಿತ್ರತಂಡದ ಹಲವರು ಭಾಗಿಯಾಗಿದ್ದರು.




