
ಐಪಿಎಲ್ 2025 ರ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಮುಖಾಮುಖಿಯಾಗಿವೆ. ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್ಗಳಲ್ಲಿ ಬರೋಬ್ಬರಿ 245 ರನ್ ಕಲೆಹಾಕಿತು. ಪಂಜಾಬ್ ನೀಡಿರುವ 246 ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿರುವ ಹೈದರಾಬಾದ್ ತಂಡದ ಪರ ಯುವ ಆರಂಭಿಕ ಬ್ಯಾಟ್ಸ್ಮನ್ ಅಭಿಷೇಕ್ ಶರ್ಮಾ ಕೇವಲ 40 ಎಸೆತಗಳಲ್ಲಿ ಶತಕ ಗಳಿಸಿ ಮೈದಾನದಲ್ಲಿ ಸಂಚಲನ ಮೂಡಿಸಿದ್ದಾರೆ. ಆರಂಭದಿಂದಲೂ ಪಂಜಾಬ್ ಬೌಲರ್ಗಳ ಹೆಡೆಮುರಿ ಕಟ್ಟಿದ ಅಭಿಷೇಕ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 40 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದ ಅಭಿಷೇಕ್ ಅವರ ಇನ್ನಿಂಗ್ಸ್ನಲ್ಲಿ 11 ಬೌಂಡರಿ ಮತ್ತು 6 ಸಿಕ್ಸರ್ಗಳನ್ನು ಬಾರಿಸಿದರು. 250ರ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ ಅಭಿಷೇಕ್ ಅಬ್ಬರದ ಮುಂದೆ ಪಂಜಾಬ್ ಬೌಲರ್ಗಳಿಗೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಇದು ಐಪಿಎಲ್ನಲ್ಲಿ ಭಾರತೀಯ ಬ್ಯಾಟರ್ ಒಬ್ಬ ದಾಖಲಿಸಿದ ಅತಿ ವೇಗದ ಮೂರನೇ ಶತಕ ಎಂಬ ದಾಖಲೆಯನ್ನು ಸೃಷ್ಟಿಸಿತು.





